Menu

ಆದಿಕಾಂಡ 1

IRV

1 ಆದಿಯಲ್ಲಿ ದೇವರು ಆಕಾಶವನ್ನು, ಭೂಮಿಯನ್ನು ಸೃಷ್ಟಿಮಾಡಿದನು. 2 ಭೂಮಿಯು ಕ್ರಮವಿಲ್ಲದೆಯೂ ಬರಿದಾಗಿಯೂ ಇತ್ತು. ಆದಿಸಾಗರದ ಮೇಲೆ ಕತ್ತಲಿತ್ತು. ದೇವರಾತ್ಮವು ಸಾಗರದ ಮೇಲೆ ಚಲಿಸುತ್ತಿತ್ತು. 3 ಅನಂತರ ದೇವರು “ಬೆಳಕಾಗಲಿ” ಎಂದು ಆಜ್ಞಾಪಿಸಲು ಬೆಳಕಾಯಿತು. 4 ದೇವರು ಆ ಬೆಳಕನ್ನು ಒಳ್ಳೆಯದೆಂದು ಕಂಡನು. 5 ದೇವರು ಬೆಳಕನ್ನೂ ಕತ್ತಲನ್ನೂ ಬೇರ್ಪಡಿಸಿ ಬೆಳಕಿಗೆ “ಹಗಲು” ಎಂದೂ, ಕತ್ತಲೆಗೆ “ಇರುಳು” ಎಂದೂ ಹೆಸರಿಟ್ಟನು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಮೊದಲನೆಯ ದಿನವಾಯಿತು. 6 ಬಳಿಕ ದೇವರು “ಜಲರಾಶಿಗಳ ನಡುವೆ ವಿಸ್ತಾರವಾದ ಗುಮ್ಮಟವು ಉಂಟಾಗಲಿ ಅದು ಕೆಳಗಿನ ನೀರುಗಳನ್ನೂ ಮೇಲಿನ ನೀರುಗಳನ್ನೂ ಬೇರೆ ಬೇರೆ ಮಾಡಲಿ” ಅಂದನು. 7 ದೇವರು ವಿಸ್ತಾರವಾದ ಗುಮ್ಮಟವನ್ನು ಮಾಡಿ ಅದರ ಕೆಳಗಿದ್ದ ನೀರುಗಳನ್ನು ಅದರ ಮೇಲಿದ್ದ ನೀರುಗಳಿಂದ ವಿಂಗಡಿಸಿದನು. ಅದು ಹಾಗೆಯೇ ಆಯಿತು. 8 ದೇವರು ಆ ಗುಮ್ಮಟಕ್ಕೆ “ಆಕಾಶ” ಎಂದು ಹೆಸರಿಟ್ಟನು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಎರಡನೆಯ ದಿನವಾಯಿತು. 9 ಅನಂತರ ದೇವರು, “ಆಕಾಶದ ಕೆಳಗಿರುವ ನೀರೆಲ್ಲಾ ಒಂದೇ ಸ್ಥಳದಲ್ಲಿ ಒಟ್ಟಿಗೆ ಕೂಡಿಕೊಳ್ಳಲಿ ಮತ್ತು ಒಣನೆಲವು ಕಾಣಿಸಲಿ” ಅಂದನು. ಹಾಗೆಯೇ ಆಯಿತು. 10 ದೇವರು ಒಣನೆಲಕ್ಕೆ “ಭೂಮಿ” ಎಂದೂ ಜಲರಾಶಿಗೆ “ಸಮುದ್ರ” ಎಂದೂ ಹೆಸರಿಟ್ಟನು. ಆತನು ಅದನ್ನು ಒಳ್ಳೆಯದೆಂದು ನೋಡಿದನು. 11 ತರುವಾಯ ದೇವರು, “ಭೂಮಿಯು ಹುಲ್ಲನ್ನು, ಸಸ್ಯಗಳನ್ನೂ, ಬೀಜಬಿಡುವ ಕಾಯಿಪಲ್ಯದ ಗಿಡಗಳನ್ನೂ ಬೆಳೆಯಿಸಲಿ ಮತ್ತು ಬೀಜವುಳ್ಳ ಹಣ್ಣಿನ ಮರಗಳನ್ನು ಅವುಗಳ ಜಾತಿಗನುಸಾರವಾಗಿ ಫಲಿಸಲಿ” ಎಂದು ಹೇಳಿದನು, ಹಾಗೆಯೇ ಆಯಿತು. 12 ಭೂಮಿಯಲ್ಲಿ ಸಸ್ಯಗಳು ಬೆಳೆದವು. ತಮ್ಮ ತಮ್ಮ ಜಾತಿಯ ಪ್ರಕಾರ ಬೀಜಬಿಡುವ ಕಾಯಿಪಲ್ಯದ ಗಿಡಗಳು ಉಂಟಾದವು. ತಮ್ಮ ತಮ್ಮ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣಿನ ಮರಗಳು ಉತ್ಪತ್ತಿಯಾದವು. ದೇವರು ಅದನ್ನು ಒಳ್ಳೆಯದೆಂದು ಕಂಡನು 13 ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಮೂರನೆಯ ದಿನವಾಯಿತು. 14 ಬಳಿಕ ದೇವರು, “ಆಕಾಶ ಮಂಡಲದಲ್ಲಿ ಬೆಳಕುಗಳು ಉಂಟಾಗಲಿ. ಅವು ಹಗಲಿರುಳುಗಳನ್ನು ಬೇರೆ ಬೇರೆ ಮಾಡಲಿ. ಅವು ಕಾಲಗಳನ್ನೂ, ದಿನಸಂವತ್ಸರಗಳನ್ನೂ ಸೂಚಿಸುವ ಗುರುತುಗಳಾಗಿರಲಿ. 15 ಭೂಮಿಯ ಮೇಲೆ ಬೆಳಕು ಕೊಡುವುದಕ್ಕೆ ಅವು ಆಕಾಶಮಂಡಲದಲ್ಲಿ ದೀಪಗಳಂತಿರಲಿ” ಅಂದನು. ಹಾಗೆಯೇ ಆಯಿತು. 16 ದೇವರು ಹಗಲನ್ನಾಳುವುದಕ್ಕೆ ದೊಡ್ಡ ದೀಪವನ್ನೂ ಇರುಳನ್ನಾಳುವುದಕ್ಕೆ ಚಿಕ್ಕ ದೀಪವನ್ನೂ ಹೀಗೆ ಎರಡು ದೊಡ್ಡ ದೀಪಗಳನ್ನು ಉಂಟು ಮಾಡಿದನು. ಆತನು ನಕ್ಷತ್ರಗಳನ್ನು ಸಹ ಉಂಟು ಮಾಡಿದನು. 17 ದೇವರು ಆ ಬೆಳಕುಗಳನ್ನು ಆಕಾಶದಲ್ಲಿ ನಿಲ್ಲಿಸಿ ಭೂಮಿಯ ಮೇಲೆ ಬೆಳಕು ಕೊಡುವುದಕ್ಕೂ 18 ಹಗಲಿರುಳುಗಳನ್ನು ಆಳುವುದಕ್ಕೂ ಬೆಳಕನ್ನು, ಕತ್ತಲನ್ನು ಬೇರೆ ಬೇರೆ ಮಾಡುವುದಕ್ಕೂ ಅವುಗಳನ್ನು ನೇಮಿಸಿದನು. ದೇವರು ಅದನ್ನು ಒಳ್ಳೆಯದೆಂದು ಕಂಡನು. 19 ಸಾಯಂಕಾಲವೂ ಉದಯಕಾಲವೂ ಆಗಿ ನಾಲ್ಕನೆಯ ದಿನವಾಯಿತು. 20 ತರುವಾಯ ದೇವರು, “ಗುಂಪು ಗುಂಪಾಗಿ ಚಲಿಸುವ ಜಲಜಂತುಗಳು ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಅಂತರಿಕ್ಷದಲ್ಲಿ ಹಾರಾಡಲಿ” ಎಂದು ಹೇಳಿದನು. 21 ಹೀಗೆ ದೇವರು ಮಹಾ ಜಲಚರಗಳನ್ನೂ ನೀರಿನಲ್ಲಿ ತುಂಬಿರುವ ಸಕಲ ವಿಧವಾದ ಜೀವಿಗಳನ್ನೂ ರೆಕ್ಕೆಗಳುಳ್ಳ ಸಕಲವಿಧವಾದ ಪಕ್ಷಿಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೆಯದೆಂದು ಕಂಡನು. 22 ಇದಲ್ಲದೆ ದೇವರು, “ಅವುಗಳಿಗೆ ನೀವು ಅಭಿವೃದ್ಧಿಯಾಗಿ ಹೆಚ್ಚಿರಿ, ಜಲಚರಗಳು ಸಮುದ್ರದ ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಹೆಚ್ಚಲಿ” ಎಂದು ಹೇಳಿ ಆಶೀರ್ವದಿಸಿದನು. 23 ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಐದನೆಯ ದಿನವಾಯಿತು. 24 ಬಳಿಕ ದೇವರು, “ಭೂಮಿಯಿಂದ ಜೀವಜಂತುಗಳು ಉಂಟಾಗಲಿ; ಪಶು, ಕ್ರಿಮಿಗಳೂ ಕಾಡುಮೃಗಗಳು, ತಮ್ಮ ತಮ್ಮ ಜಾತಿಗನುಸಾರವಾಗಿ ಹುಟ್ಟಲಿ” ಅಂದನು. ಹಾಗೆಯೇ ಆಯಿತು. 25 ದೇವರು ಕಾಡುಮೃಗಗಳನ್ನೂ, ಪಶುಗಳನ್ನೂ, ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೆಯದೆಂದು ಕಂಡನು. 26 ಆಮೇಲೆ ದೇವರು, ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯರನ್ನು ಉಂಟು ಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ, ಪ್ರಾಣಿಗಳ ಮೇಲೆಯೂ, ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಕೀಟಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ದೊರೆತನಮಾಡಲಿ ಅಂದನು. 27 ಹೀಗೆ ದೇವರು; “ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದನು. ದೇವರ ಸ್ವರೂಪದಲ್ಲಿ ಅವನನ್ನು ಉಂಟುಮಾಡಿದನು. ಅವರನ್ನು ಗಂಡುಹೆಣ್ಣಾಗಿ ಸೃಷ್ಟಿ ಮಾಡಿದನು." 28 ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿ, “ನೀವು ಬಹು ಸಂತಾನವುಳ್ಳವರಾಗಿ ಹೆಚ್ಚಿರಿ. ಭೂಮಿಯಲ್ಲಿ ತುಂಬಿಕೊಂಡು ಅದನ್ನು ವಶಮಾಡಿಕೊಳ್ಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ದೊರೆತನ ಮಾಡಿರಿ” ಎಂದು ಅವರಿಗೆ ಹೇಳಿದನು. 29 ಅಲ್ಲದೆ ದೇವರು, “ಇಗೋ, ಸಮಸ್ತ ಭೂಮಿಯ ಮೇಲಿರುವ ಬೀಜವುಳ್ಳ ಎಲ್ಲಾ ಪೈರುಗಳನ್ನೂ, ಬೀಜವುಳ್ಳ ಎಲ್ಲಾ ಹಣ್ಣಿನ ಮರಗಳನ್ನೂ ನಿಮಗೆ ಆಹಾರಕ್ಕಾಗಿ ಕೊಟ್ಟಿದ್ದೇನೆ 30 ಇದಲ್ಲದೆ ಭೂಮಿಯ ಮೇಲೆ ತಿರುಗಾಡುವ ಮೃಗಗಳು, ಆಕಾಶದಲ್ಲಿ ಹಾರಾಡುವ ಪಕ್ಷಿಗಳು, ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳು ಮೊದಲಾದ ಜೀವಿಗಳಿಗೆ ಹಸುರಾದ ಸಸ್ಯಗಳನ್ನೆಲ್ಲಾ ಆಹಾರಕ್ಕಾಗಿ ಕೊಟ್ಟಿದ್ದೇನೆ” ಎಂದು ಹೇಳಿದನು. ಅದು ಹಾಗೆಯೇ ಆಯಿತು. 31 ದೇವರು ತಾನು ಉಂಟುಮಾಡಿದ್ದನ್ನೆಲ್ಲಾ ನೋಡಲಾಗಿ ಅವೆಲ್ಲವೂ ಬಹು ಒಳ್ಳೆಯದಾಗಿ ತೋರಿತು. ಸಾಯಂಕಾಲವೂ ಉದಯಕಾಲವೂ ಆಗಿ ಆರನೆಯ ದಿನವಾಯಿತು.

Everything we make is available for free because of a generous community of supporters.

Donate