Menu

ಕೀರ್ತನೆಗಳು 48

IRV

1 ಯೆಹೋವನು ಮಹೋನ್ನತನು; ನಮ್ಮ ದೇವರು ತನ್ನ ಪರಿಶುದ್ಧ ಪರ್ವತ ನಗರದಲ್ಲಿ ಸರ್ವಸ್ತುತಿಗೆ ಪಾತ್ರನಾಗಿದ್ದಾನೆ. 2 ರಾಜಾಧಿರಾಜನ ಪಟ್ಟಣವಿರುವ ಚೀಯೋನ್ ಪರ್ವತವು ಉತ್ತರದಿಕ್ಕಿನಲ್ಲಿ ಉನ್ನತವಾಗಿಯೂ, ರಮ್ಯವಾಗಿಯೂ, ಭೂಲೋಕದಲ್ಲೆಲ್ಲಾ ಕಂಗೊಳಿಸುತ್ತಿರುವುದು. 3 ದೇವರು ಅದರ ಕೊತ್ತಲುಗಳಲ್ಲಿ, ತಾನೇ ಭದ್ರವಾದ ಬುರುಜೆಂದು ಕೀರ್ತಿಪಡೆದನು. 4 ರಾಜರು ಕೂಡಿಕೊಂಡರು; ಅವರು ಒಗ್ಗಟ್ಟಾಗಿ ಬಂದರು. 5 ನೋಡಿ ಬೆರಗಾದರು; ತಲ್ಲಣಿಸಿ ಓಡಿಹೋದರು. 6 ಕಂಪನವೂ ಹೆರುವವಳಂತೆ, ವೇದನೆಯೂ ಅವರಿಗೆ ಉಂಟಾಯಿತು. 7 ದೇವರೇ, ನೀನು ಬಿರುಗಾಳಿಯಿಂದ ತಾರ್ಷಿಷ್ ದೇಶದ ದೊಡ್ಡ ದೊಡ್ಡ ಹಡಗುಗಳನ್ನು ಒಡೆದುಬಿಟ್ಟಂತಾಯಿತು. 8 ನಾವು ಕಿವಿಯಿಂದ ಕೇಳಿದಂತೆಯೇ ಈಗ ಕಣ್ಣಾರೆ ಕಂಡೆವು; ನಮ್ಮ ದೇವರೂ ಸೇನಾಧೀಶನೂ ಆಗಿರುವ ಯೆಹೋವನ ಸಂಸ್ಥಾನದಲ್ಲಿ ಆತನ ಮಹತ್ತನ್ನು ನೋಡಿದ್ದೇವೆ. ದೇವರು ಅದನ್ನು ಶಾಶ್ವತವಾಗಿ ಸ್ಥಾಪಿಸುವನು. ಸೆಲಾ 9 ದೇವರೇ, ನಾವು ನಿನ್ನ ಆಲಯದಲ್ಲಿ, ನಿನ್ನ ಪ್ರೀತಿಯನ್ನು ಸ್ಮರಿಸುತ್ತೇವೆ; 10 ದೇವರೇ, ನಿನ್ನ ನಾಮದ ಘನತೆಗೆ ತಕ್ಕಂತೆಯೇ, ಲೋಕವೆಲ್ಲಾ ನಿನ್ನನ್ನು ಹೊಗಳುವುದು. ನಿನ್ನ ಬಲಗೈ ನೀತಿಯನ್ನು ನೆರವೇರಿಸಿತು. 11 ಚೀಯೋನ್ ಪಟ್ಟಣದವರು ಹರ್ಷಿಸಲಿ; ನೀನು ನ್ಯಾಯವನ್ನು ನಿರ್ಣಯಿಸಿದ್ದರಿಂದ, ಯೆಹೂದ ಸೀಮೆಯ ನಿವಾಸಿಗಳು ಆನಂದಪಡಲಿ. 12 ಚೀಯೋನ್ ಸಂಸ್ಥಾನದ ಸುತ್ತಲೂ ಸಂಚರಿಸಿ, ಅದರ ಬುರುಜುಗಳನ್ನು ಲೆಕ್ಕಿಸಿರಿ. 13 ಅದರ ಪ್ರಾಕಾರಗಳನ್ನು ಚೆನ್ನಾಗಿ ನೋಡಿರಿ; ಅದರ ಕೊತ್ತಲುಗಳನ್ನು ಸೂಕ್ಷ್ಮವಾಗಿ ಗಮನಿಸಿರಿ. 14 ಆಗ ನೀವು ನಿಮ್ಮ ಮುಂದಣ ಸಂತತಿಯವರಿಗೆ, ದೇವರು ಇಂಥವನು; ಆತನು ಯುಗಯುಗಾಂತರಗಳಲ್ಲಿಯೂ ನಮ್ಮ ದೇವರು, ನಿರಂತರವೂ ನಮ್ಮನ್ನು ನಡೆಸುವವನಾಗಿದ್ದಾನೆ ಎಂದು ತಿಳಿಸುವಿರಿ.

Everything we make is available for free because of a generous community of supporters.

Donate